ಮೌಲ್ಯ ವರ್ಧಿತ ತೆರಿಗೆ ಪದ್ಧತಿಯನ್ನು ಕೈ ಬಿಟ್ಟು ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಆಸ್ತಿ ತೆರಿಗೆ ವಿವಾದಕ್ಕೆ ತೆರೆ ಎಳೆದಂತಾಗಿದೆ.
ಈ ಕುರಿತು ಮಾಹಿತಿ ನೀಡಿದ ಸಾರಿಗೆ ಸಚಿವ ಆರ್. ಅಶೋಕ್, ಬೆಂಗಳೂರು ನಗರ ನಿವಾಸಿಗಳಿಗೆ ಹೊರೆಯಾಗಬಾರದೆಂಬ ದೃಷ್ಟಿಯಿಂದ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಮೌಲ್ಯ ವರ್ಧಿತ ತೆರಿಗೆ ಕೈಬಿಡಲು ನಿರ್ಧರಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡು 15 ದಿನಗಳಲ್ಲಿ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಅವರು ತಿಳಿಸಿದರು.
ಸರ್ಕಾರ ಕೈಗೊಳ್ಳುವ ಈ ತೀರ್ಮಾನದಿಂದ ನಗರದ ಜನತೆಗೆ ಶೇ.20ರಷ್ಟು ಹೊರೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. |
|