ಐತಿಹಾಸಿಕ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ನಾಯಕರನ್ನು ಮೃಗಗಳು ಎಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಯನ್ನು ಪ್ರತಿಪಕ್ಷ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬುಧವಾರ ನಗರಕ್ಕೆ ಆಗಮಿಸಿದ ಆರ್.ವಿ. ದೇಶಪಾಂಡೆ, ಮುಖ್ಯಮಂತ್ರಿಗಳು ನಾಲಿಗೆ ಮೇಲೆ ಹತೋಟಿ ಇಟ್ಟುಕೊಂಡು ಮಾತನಾಡಲಿ ಎಂದು ಗುಡುಗಿದ್ದಾರೆ.
ಇದೇ ವೇಳೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ತಿಳಿಸಿದ್ದಾರೆ.
ಕೇವಲ ಪಕ್ಷಾಂತರ, ಪಕ್ಷದ ಪ್ರಗತಿ, ಸಂಘ ಪರಿವಾರದವರ ಒಡನಾಟದಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಉಚಿತ ವಿದ್ಯುತ ನೀಡುವ ಸರ್ಕಾರದ ಭರವಸೆ ಕೇವಲ ಭರವಸೆಯಾಗಿಯೇ ಉಳಿದಿದೆ. ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ ಎಂದು ತಿಳಿಸಿರುವ ಸರ್ಕಾರ ಪ್ರತಿದಿನ ಲೋಡ್ ಶೆಡ್ಡಿಂಗ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕಾಂಗ್ರೆಸ್ ಭಿನ್ನಾಭಿಪ್ರಾಯದ ಕುರಿತು ಮಾತನಾಡಿದ ದೇಶಪಾಂಡೆ, ಕಾಂಗ್ರೆಸ್ ನಾಯಕರ ನಡುವೆ ಯಾವುದೇ ಮನಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು. |
|