ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ವಿರುದ್ಧ ಇದೀಗ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಠಾಧೀಶರಲ್ಲಿ ಸ್ವಜಾತಿ ಪ್ರೇಮ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀಗಳನ್ನು ದಸರಾ ಉದ್ಘಾಟನೆಗೆ ಆಹ್ವಾನ ನೀಡಿದರೂ, ಸ್ವೀಕರಿಸಿರಲಿಲ್ಲ. ಈಗ ಬಿಜೆಪಿ ನಾಯಕರು ಕರೆದಾಗ ಬಂದಿದ್ದಾರೆ ಎಂದು ದೂರಿದ್ದಾರೆ.
ಈ ಮೂಲಕ ದಸರಾಕ್ಕೂ ಜಾತಿ ಬಣ್ಣ ಲೇಪನ ಮಾಡಲಾಗಿದೆ ಎಂದು ಆಕ್ರೋಶದ ಮಾತನ್ನಾಡಿದ ಕುಮಾರಸ್ವಾಮಿ, ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೇವಣ್ಣ ಲೋಕೋಪಯೋಗಿ ಸಚಿವರಾಗಿ ಮಠ ಮಾನ್ಯಗಳಿಗೆ ಮಾಡಿದಷ್ಟು ಅಭಿವೃದ್ಧಿ ಕಾರ್ಯವನ್ನು ಹಿಂದಿನವರು ಯಾರೂ ಮಾಡಿರಲಿಲ್ಲ. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠಕ್ಕೂ ಸಾಕಷ್ಟು ಯೋಜನೆಗಳನ್ನು ಪ್ರಕಟಿಸಲಾಗಿತ್ತು ಎಂದು ತಿಳಿಸಿದ್ದಾರೆ.
ದಸರಾ ಮಹೋತ್ಸವದ ವೇದಿಕೆಯಲ್ಲಿ ಮುಖ್ಯಮಂತ್ರಿಗಳು ರಾಜಕೀಯ ವಿಚಾರಗಳ ಪ್ರಸ್ತಾಪ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. |