ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರಕ್ಕೆ ಶುಕ್ರವಾರ ಭೇಟಿ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಅದರಂತೆ ಮುಂದುವರಿಸಿಕೊಂಡು ಹೋಗಲಾಗುವುದು,ಅದರಲ್ಲಿ ಬೇರೆ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಭಾಗ್ಯಲಕ್ಷ್ಮಿ ಯೋಜನೆ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮತ್ರಿಗಳು ನಿರಾಕರಿಸಿದ್ದಾರೆ.
ನವೆಂಬರ್ 15ರಂದು ಕನಕ ಜಯಂತಿಯನ್ನು ವಿಧಾನಸೌಧದಲ್ಲಿ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಆ ದಿನವನ್ನು ಸರ್ಕಾರಿ ರಜೆಯನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತುಂಗಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. |