ನ್ಯಾನೋ ಸಣ್ಣ ಕಾರು ಘಟಕವನ್ನು ರಾಜ್ಯಕ್ಕೆ ತರಲು ಪ್ರಯತ್ನ ನಡೆಸುತ್ತಿರುವ ರಾಜ್ಯ ಸರ್ಕಾರ, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಬೇರೆ ರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟಕ ರಾಜ್ಯದಲ್ಲಿ ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಟಾಟಾ ಕಂಪೆನಿ ಮುಖ್ಯಸ್ಥ ರತನ್ ಟಾಟಾ ಅವರನ್ನು ಖುದ್ಧಾಗಿ ಭೇಟಿ ಮಾಡಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ನ್ಯಾನೋ ಘಟಕ ಸ್ಥಾಪಿಸುವ ಕುರಿತು ಮೂರು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಎಲ್ಲಾ ಸೌಕರ್ಯಗಳನ್ನು ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ. ಈ ವಾರಾಂತ್ಯದಲ್ಲಿ ಅಂತಿಮ ಸುತ್ತಿನ ಮಾತುಕತೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಚರ್ಚ್ ಮೇಲಿನ ದಾಳಿ ಪ್ರಕರಣವನ್ನು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಹೇಳಿಕೆಯನ್ನು ತಳ್ಳಿ ಹಾಕಿದ ಮುಖ್ಯಮಂತ್ರಿಗಳು, ಇದು ಸರಿಯಾದ ನಿರ್ಧಾರವಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಾಗುತ್ತಿದೆ. ಇದನ್ನು ಬದಲಿಸುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ. |