ಗುಜರಾತ್ ಮಾದರಿ, ಎನ್ ಡಿಎ ಮಾದರಿ ಎಲ್ಲವೂ ಆಗಿ ಇದೀಗ ಶೋಭಾ ಮಾದರಿಯಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕಾರಿಗಳ ವರ್ಗಾವಣೆಯಿಂದ ಹಿಡಿದು ಸರ್ಕಾರದ ಪ್ರತಿಯೊಂದು ಕೆಲಸವೂ ಶೋಭಾ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ. ಈ ಮೂಲಕ ಸರ್ವಾಧಿಕಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಅಲ್ಪಸಂಖ್ಯಾತರು ಮತ್ತು ಬಡವರ ಮೇಲೆ ಧಾರ್ಮಿಕ ನಡೆಸುವ ಮೂಲಕ ಗುಜರಾತ್ ಮೋದಿ ಮಾದರಿ ಆಡಳಿತ ನಡೆಸಿತು. ಬಳಿಕ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದ ಮಾದರಿ ಆಡಳಿತ ನೀಡುವುದಾಗಿ ಹೇಳಿತು. ಇದೀಗ ಶೋಭಾ ಮಾದರಿಯಲ್ಲಿ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪೂಜಾರಿ, ಮುಂದಿನ ಉಪಚುನಾವಣೆಯಲ್ಲಿ ಎಲ್ಲ ಎಂಟು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬಹುದು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದೆ ಬರಬೇಕೆಂದು ಕರೆ ನೀಡಿದರು. |