ನಗರದ ಹೊರವಲಯದ ಬಾಗಲೂರು ವಲಯದ ರೆಸಾರ್ಟ್‌ನಲ್ಲಿ ಮಂಗಳವಾರ ರಾತ್ರಿ ನಡೆದ ಶೂಟೌಟ್ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ಸಿಓಡಿ ತನಿಖೆಗೆ ಒಪ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.
ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನೋದ್ ಕುಮಾರ್ ಕೊಲೆ ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸುವ ಸಂಬಂಧ ಪೊಲೀಸ್ ಮಹಾನಿರ್ದೇಶಕರೊಂದಿಗೆ ಶೀಘ್ರದಲ್ಲಿ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮಾದೇಶ ಚಿತ್ರದ ನಿರ್ಮಾಪಕರಾದ ಗೋವರ್ಧನ ತಲೆ ಮರೆಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ವಿದೇಶಗಳಿಗೆ ತೆರಳದಂತೆ ವಿಮಾನ ನಿಲ್ದಾಣಗಳಲ್ಲಿ ಹದ್ದಿನ ಕಣ್ಣಿಡಲಾಗಿದ್ದು, ಇನ್ನೆರಡು ದಿನಗಳಲ್ಲಿ ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. |