ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ಪಕ್ಷದ ಗುರಿ ಎಂದು ಹೇಳಿರುವ ಕಾಂಗ್ರೆಸ್‌ನ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್‌ಗೆ ರಾಜ್ಯದ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು ದಸರಾದ ಜಂಬೂ ಸವಾರಿಯನ್ನು ಉದ್ಘಾಟಿಸುವ ಮುನ್ನ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ,ಪಕ್ಷದ ಮುಖಂಡರು ಬಿಜೆಪಿ ವಿರುದ್ಧ ನೀಡಿದ ಹೇಳಿಕೆ ಕುರಿತು ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ಈಗಾಗಲೇ ಮೈಸೂರು ದಸರಾವನ್ನು ನಾಡಹಬ್ಬ ಎಂದು ಘೋಷಿಸಿದ್ದು, ಮುಂದಿನ ವರ್ಷದಿಂದ ದಸರಾ ಮಹೋತ್ಸವನ್ನು ಅದ್ದೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ತೆರನಾದ ನೆರವನ್ನು ನೀಡಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಜನರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದ ಯಾವುದೇ ಅಹಿತಕರ ಘಟನೆ ನಡೆಯದೇ ದಸರಾ ಮಹೋತ್ಸವ ನಡೆದಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. |