ವಿಧಾನಸಭಾ ಮರು ಚುನಾವಣಾ ಕಣದಿಂದ ಹಿಂದೆ ಸರಿದಿರುವ ಸಮಾಜವಾದಿ ಪಕ್ಷ ಲೋಕಸಭಾ ಚುನಾವಣೆಯತ್ತ ದೃಷ್ಟಿ ನೆಟ್ಟಿದ್ದು, ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾಗಿರುವುದಾಗಿ ತಿಳಿಸಿದೆ.
ಈ ವಿಷಯವನ್ನು ಶುಕ್ರವಾರ ಸ್ಪಷ್ಟಪಡಿಸಿದ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಎಸ್. ಬಂಗಾರಪ್ಪ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಒಟ್ಟು ಲೋಕಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರವನ್ನು ಸಮಾಜವಾದಿ ಪಕ್ಷಕ್ಕೆ ಬಿಟ್ಟುಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಕಾರವಾರ, ಹಾವೇರಿ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಈ ಕ್ಷೇತ್ರಗಳಾಗಿವೆ ಎಂದು ವಿವರಿಸಿದರು.
ಮುಂದಿನ ಜನವರಿ ಅಥವಾ ಫೆಬ್ರುವರಿಯಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದ ಬಂಗಾರಪ್ಪ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಹೊಂದಾಣಿಕೆ ಮಾಡಿಕೊಳ್ಳುವುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ. |