ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯ ಎಲ್ಲಾ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಕಣಕ್ಕಿಳಿಯಲಿದ್ದು, ಮೂರು ಕ್ಷೇತ್ರಗಳಲ್ಲೂ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಗಳಿಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ಜನತೆಯ ಆಶಯಗಳಿಗೆ ದ್ರೋಹವೆಸಗಿದ್ದಾರೆ ಎಂದು ದೂರಿದರು.
ಕೇಂದ್ರ ಸರ್ಕಾರ ನಡೆಸಿದ ಭಾವೈಕ್ಯತಾ ಸಭೆ ಕುರಿತು ಪ್ರತಿಕ್ರಿಯಿಸಿದ ಅವರು, ಸಭೆಯಲ್ಲಿ ವಿಚಾರ ಮಂಡನೆಗೆ ಅವಕಾಶ ನೀಡದೆ ಕಾಟಾಚಾರಕ್ಕೆ ನಡೆಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. |