ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪ್ರಸ್ತಾಪ ಇದೀಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದು, ಗುರುವಾರದಂದು ಕೆಪಿಸಿಸಿ ಅಧ್ಯಕ್ಷ ಆರ್. ವಿ.ದೇಶಪಾಂಡೆ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ.
ಈ ಮೂಲಕ ಎರಡು ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ನಗರದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಘಟಕಗಳ ಅಧ್ಯಕ್ಷರುಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ದೇಶಪಾಂಡೆ ಮಾತನಾಡುತ್ತಿದ್ದರು.
ಕೋಮುವಾದಿಗಳನ್ನು ಸೋಲಿಸಲು ಎರಡೂ ಪಕ್ಷಗಳು ಪಣತೊಟ್ಟಿದ್ದು, ನಾಳೆ ನಡೆಯಲಿರುವ ಮಾತುಕತೆಯಲ್ಲಿ ಮೈತ್ರಿ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಅಲ್ಲದೆ, ಮಾತುಕತೆ ಬಳಿಕ ಹೈಕಮಾಂಡ್ ಗೆ ಈ ಕುರಿತು ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ದಿಲೀಪ್ ಹತ್ಯೆ ಪ್ರಕರಣ:ದಿಲೀಪ್ ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಧನಂಜಯ್ ಕುಮಾರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ದೇಶಪಾಂಡೆ, ತಮ್ಮ ಮೇಲಿನ ಆರೋಪಗಳ ಕುರಿತು ದಾಖಲೆಗಳಿದ್ದರೆ ಕೂಡಲೇ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ತಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡಿರುವ ಧನಂಜಯ್ ಕುಮಾರ್ ವಿರುದ್ಧ ಮುಖ್ಯಮಂತ್ರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು. |