ವೇಗ ನಿಯಂತ್ರಕ ಅಳವಡಿಕೆ ಕಡ್ಡಾಯ ವಿವಾದಕ್ಕೆ ಸಂಬಂಧಿಸಿದಂತೆ ಲಾರಿ ಮಾಲೀಕರು ಮತ್ತೊಮ್ಮೆ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ.
ವೇಗ ನಿಯಂತ್ರಕ ಅಳವಡಿಕೆ ಕುರಿತು ಸುಪ್ರೀಂಕೋರ್ಟ್ ಕಳೆದ ತಿಂಗಳು ಒಂದು ತಿಂಗಳ ಕಾಲಾವಕಾಶ ನೀಡಿತ್ತು. ಸರ್ಕಾರ ಈ ನಿಯಮವನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದೆ. ಆದರೆ ಈವರೆಗೂ ಕ್ರಮ ಕೈಗೊಂಡಿಲ್ಲ.
ಕೂಡಲೇ ಸರ್ಕಾರ ಈ ನಿಯಮವನ್ನು ಪುನರ್ ಪರಿಶೀಲಿಸದಿದ್ದರೆ ಅ.30ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟರ ಒಕ್ಕೂಟ ಬೆದರಿಕೆ ಹಾಕಿದೆ.
ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಲಾರಿ, ಬಸ್, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿ ಸೇರಿದಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಹೇಳಿದ್ದಾರೆ.
ಸೆ.30ರೊಳಗಾಗಿ ವಾಣಿಜ್ಯ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕು ಎಂಬ ಹೈಕೋರ್ಟ್ ಆದೇಶದ ವಿರುದ್ಧ ಲಾರಿ ಮಾಲೀಕರ ಒಕ್ಕೂಟ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವೇಗನಿಯಂತ್ರಕ ಅಳವಡಿಕೆಗೆ ಒಂದು ತಿಂಗಳ ಕಾಲಾವಕಾಶ ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಆರ್.ಅಶೋಕ್ ಹೇಳಿದ್ದರು. ಆದರೆ ಈವರೆಗೆ ಯಾವುದೇ ಪ್ರಗತಿಯಾಗಿಲ್ಲ ಎಂದು ಒಕ್ಕೂಟ ಆರೋಪಿಸಿದೆ. |