ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವ ಹಾಗೂ ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನವೆಂಬರ್ 5ರಂದು ಸರ್ವಪಕ್ಷಗಳ ನಿಯೋಗ ದೆಹಲಿಗೆ ತೆರಳುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಈ ಕುರಿತು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಗಳು ರಾಜ್ಯದ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಲು ಸಮಯವಕಾಶ ಕೋರಿದ್ದಾರೆ.
ಆರು ಕೋಟಿ ಕನ್ನಡಿಗರ ಬಹುದಿನಗಳ ಬೇಡಿಕೆಗಳಾದ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಮತ್ತು ಹೈದರಾಬಾದ್ ಕರ್ನಾಟಕ್ಕೆ ವಿಶೇಷ ಒತ್ತು ನೀಡುವ ಕುರಿತು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ನಿಟ್ಟಿನಲ್ಲಿ ಮನವಿ ಸಲ್ಲಿಸಿದ್ದರೂ, ಯಾವುದೂ ಪ್ರಯೋಜನವಾಗಿರಲಿಲ್ಲ ಎಂದು ದೂರಿದ್ದಾರೆ.
ಕನ್ನಡಿಗರ ಈ ಬೇಡಿಕೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತರುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. |