ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜಭವನದವರೆಗೆ ಬೃಹತ್ ಪ್ರತಿಭಟನಾ ರಾಲಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. ಇದರಿಂದ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಗುಂಪನ್ನು ಚದರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಒಂದು ವಾರದೊಳಗೆ ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದಲ್ಲಿ ಕರ್ನಾಟಕ ರಾಜ್ಯವು ಭಾರತ ಒಕ್ಕೂಟ ವ್ಯವಸ್ಥೆಯಿಂದ ಹೊರ ಬರಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಒಂದು ವೇಳೆ ಮನವಿಯನ್ನು ಕೇಂದ್ರ ಪರಿಗಣಿಸದಿದ್ದಲ್ಲಿ, ಮಹಾರಾಷ್ಟ್ರದಲ್ಲಿ ನಡೆದಿರುವ ಘಟನೆ ರಾಜ್ಯದಲ್ಲಿಯೂ ಮರುಕಳಿಸಿದರೆ ಅಚ್ಚರಿಯಿಲ್ಲ ಎಂದು ತಿಳಿಸಿದ್ದಾರೆ.
ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವುದಾದರೆ ಸಾವಿರಾರು ವರ್ಷ ಇತಿಹಾಸವಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವುದಕ್ಕೆ ಕೇಂದ್ರ ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. |