ಶೀಘ್ರದಲ್ಲೇ ಎಂಟು ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಮೂರು ಸಾವಿರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದರು.
ಇದರಲ್ಲಿ ಸರ್ವಶಿಕ್ಷಣ ಅಭಿಯಾನದಡಿ ಭರ್ತಿ ಮಾಡುವ 1200ಶಿಕ್ಷಕರು ಸೇರಿದ್ದಾರೆ. ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಇನ್ನೊಂದು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ನೇಮಕಾತಿಯ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲವೆಂದು ಸ್ಪಷ್ಟಪಡಿಸಿದರು.
ಭಾರೀ ಪ್ರಮಾಣದಲ್ಲಿ ಶಿಕ್ಷಕರ ಕೊರತೆ ಇಲ್ಲ, ನಿವೃತ್ತಿ ವಯಸ್ಸು ಹೆಚ್ಚಿಸಿದ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆ ನಿವಾರಣೆಯಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ನೇಮಕಾತಿ ಪೂರ್ಣಗೊಂಡು ಸಕಾಲದಲ್ಲಿ ಶಿಕ್ಷಕರು,ಪಠ್ಯಪುಸ್ತಕ,ಸಮವಸ್ತ್ರ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. |