ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರು ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರು ರಾಷ್ಟ್ರಮಟ್ಟದ ನಾಯಕರು. ಅಂತಹವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಕುರಿತು ಕಾಂಗ್ರೆಸ್‌ನಲ್ಲಿ ವ್ಯಕ್ತಿಗತ ನಿರ್ಧಾರ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಕುರಿತು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ರಾಜ್ಯ ನಾಯಕರು ಬದ್ಧರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತು ವಿವಾದಗಳು ಹುಟ್ಟಿಕೊಂಡ ಬೆನ್ನಲ್ಲೆ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು, ರಾಜ್ಯದ 8 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಶುಕ್ರವಾರದಂದು ಸ್ಪಷ್ಟಪಡಿಸಿದ್ದರು. |