ವಿಧಾನಸಭಾ ಉಪಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ಇದೀಗ ಮತ್ತೊಮ್ಮೆ ಪುನರುಚ್ಚರಿಸಿದೆ.
ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳನ್ನು ಮಣಿಸಲು ಹೊಂದಾಣಿಕೆ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಉಸ್ತುವಾರಿ ಸಚಿವ ಪೃಥ್ವಿರಾಜ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸಮಾನ ಮನಸ್ಕರೊಂದಿಗೆ ಚರ್ಚಿಸಿ, ಅಗತ್ಯ ಬಿದ್ದಲ್ಲಿ ಹೊಂದಾಣಿಕೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಕುರಿತು ಇದುವರೆಗೆ ಯಾವ ಮುಖಂಡರೊಂದಿಗೆ ಮಾತುಕತೆ ನಡೆಸಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರೊಂದಿಗೆ ಶೀಘ್ರದಲ್ಲಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಅಸಮಾಧಾನದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ನಾಯಕರು. ಇವರ ಸ್ಥಾನಮಾನದ ಕುರಿತು ಮಾಧ್ಯಮದವರೊಂದಿಗೆ ಚರ್ಚೆ ಅನಗತ್ಯ ಎಂದು ಮಾಧ್ಯಮ ವದಂತಿಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದರು. |