ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ಬಗ್ಗೆ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ವಿವಿಧ ಸಮಿತಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಅಕ್ಟೋಬರ್ 30ರಂದು ಪ್ರಕಟಿಸಲಾಗುವುದು. ಈ ನಿಟ್ಟಿನಲ್ಲಿ ಪಟ್ಟಿ ಸಿದ್ದಪಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಪುರಸ್ಕೃತರ ಪಟ್ಟಿಯನ್ನು 80ಕ್ಕೆ ಸೀಮಿತಗೊಳಿಸಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಸೂಕ್ತ ವ್ಯಕ್ತಿಗಳನ್ನೇ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಸರ್ವಪಕ್ಷ ನಿಯೋಗದೊಂದಿಗೆ ಭಾಗವಹಿಸದಿರಲು ನಿರ್ಧರಿಸಿರುವ ವಿಪಕ್ಷಗಳ ತೀರ್ಮಾನದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಮತ್ತೊಮ್ಮೆ ವಿರೋಧ ಪಕ್ಷಗಳ ನಾಯಕರೊಂದಿಗೆ ದೂರವಾಣಿ ಮುಖೇನ ಮಾತುಕತೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಅವರ ಜೀವನ ಚರಿತ್ರೆ ಕುರಿತಾದ ಕನ್ನಡ ಅವತರಣಿಕೆಯನ್ನು ಮುಂದಿನ ತಿಂಗಳ ನಾಲ್ಕರಂದು ಬಿಡುಗಡೆ ಮಾಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |