ಸಂಡೂರು ತಾಲೂಕಿನ ತುಮಟಿ ಗ್ರಾಮದ ಬಳಿ ಗಡಿ ಒತ್ತುವರಿ ವಿವಾದವನ್ನು ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಆಂಧ್ರ-ಕರ್ನಾಟಕ ರಾಜ್ಯಗಳ ಜಂಟಿ ಸಮೀಕ್ಷೆ ನಡೆಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವಿಧಾನಪರಿಷತ್ ನಾಯಕ ಎಸ್.ವಿ. ಉಗ್ರಪ್ಪ ನೇತೃತ್ವದಲ್ಲಿ ಗಡಿ ವಿವಾದದ ಗಣಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸುಮಾರು ಒಂದೂವರೆ ಕಿ.ಮೀ.ನಷ್ಟು ಭೂ ಪ್ರದೇಶವನ್ನು ಒತ್ತುವರಿ ಮಾಡಲಾಗಿದ್ದು, ಬ್ರಿಟಿಷ್ ಕಾಲದಲ್ಲಿ ಹಾಕಲಾಗಿದ್ದ ಗಡಿಕಲ್ಲುಗಳನ್ನು ನಾಶಪಡಿಸಿರುವ ಕುರಿತು ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಬೇಕು. ಜಂಟಿ ಸಮೀಕ್ಷೆ ಆಗುವವರೆಗೆ ವಿವಾದಿತ ಪ್ರದೇಶದಲ್ಲಿ ಗಣಿ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಕುರಿತು ಮಾತನಾಡಿದ ಖರ್ಗೆ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಸರ್ಕಾರ ಒಲವು ತೋರಿಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಭರವಸೆ ನೀಡಿದ್ದಾರೆ ಎಂದರು.
ಅಲ್ಲದೆ, ಈ ಕುರಿತು ಪ್ರಧಾನಿ ಮಂತ್ರಿ, ಗೃಹ ಸಚಿವರು ಸೇರಿದಂತೆ ಹಲವು ಮುಖಂಡರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. |