ಬೆಂಗಳೂರು: ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯ್ಲಿ, ರಾಜ್ಯ ಸರ್ಕಾರದ ಆಡಳಿತ ನಿರ್ವಹಣೆಯ ವಿದ್ಯುತ್ ಅಭಾವಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸರಬರಾಜು ಸಂಸ್ಥೆಗೆ ಅಧಿಕಾರ ಸ್ವಾಯತ್ತತೆ ಇಲ್ಲ. ವಿದ್ಯುತ್ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದರಿಂದ ಯಾವುದೇ ನಿರ್ಣಯ ಕೈಗೊಳ್ಳುವಲ್ಲಿ ವಿಫಲವಾಗಿ ವಿದ್ಯುತ್ ಸಮಸ್ಯೆ ನಿರ್ವಹಣೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಕೇವಲ ಭಾಷಣ, ಘೋಷಣೆಗಳನ್ನು ಮಾಡುತ್ತಾ, ಪತ್ರಿಕೆಗಳಲ್ಲಿ ಜಾಹೀರಾತು ನೀಡಿದರೆ ಸಾಲದು. ಕಾರ್ಯ ನಿರ್ವಹಿಸಬೇಕು ಎಂದು ಟೀಕಿಸಿದ್ದಾರೆ.
ನಗರದಲ್ಲಿ ಸಮರ್ಪಕ ವಿದ್ಯುತ್ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ ಅವರು, ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ನೀರು ಸಂಗ್ರಹ ಕಳೆದ ವರ್ಷದಷ್ಟೇ ಇದ್ದರೂ, ಥರ್ಮಲ್ ಘಟಕದಲ್ಲಿ ಎರಡು ವಾರಕ್ಕೆ ಆಗುವಷ್ಟು ಕಲ್ಲಿದ್ದಲು ಇಲ್ಲ. ಇದನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದೇ ವಿದ್ಯುತ್ ಅಭಾವಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. |