ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ಗಳನ್ನು ಮಾರಾಟ ಮಾಡಲಾಗಿದೆ ಎಂಬ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವ ಆರೋಪಕ್ಕೆ ಸಂಬಂಧಿಸಿದಂತೆ ಕಾಗೋಡು ತಿಮ್ಮಪ್ಪ ಮತ್ತು ಕೆ.ಸಿ.ಕೊಂಡಯ್ಯ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ನರೇಂದ್ರ ಸ್ವಾಮಿ ಗುರುವಾರ ಗಂಭೀರವಾಗಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸ್ವಾಮಿ, ಆಳ್ವಾ ಅವರ ಹೇಳಿಕೆಯಲ್ಲಿ ಸತ್ಯಾಂಶವಿದೆ. ಅಲ್ಲದೇ ಅವರು ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿದ್ದಾರೆ, ಅವರೂ ಕೂಡ ಈ ಟಿಕೆಟ್ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದರು.
ಈ ನಿಟ್ಟಿನಲ್ಲಿ ಮ್ಯಾಗಿ ಅವರ ಆರೋಪದ ಸತ್ಯಾಂಶ ಬಯಲಿಗೆ ಬರಬೇಕಿದ್ದರೆ, ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ ಹಾಗೂ ಕೆ.ಸಿ.ಕೊಂಡಯ್ಯ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಆರೋಪದಲ್ಲಿ ಹುರುಳಿಲ್ಲ: ಸಚಿವ ನರೇಂದ್ರ ಸ್ವಾಮಿ ಅವರ ಆರೋಪಕ್ಕೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಕಾಗೋಡು, ಸ್ವಾಮಿ ಅವರ ಆರೋಪ ಕುಚೋದ್ಯದಿಂದ ಕೂಡಿದ್ದು, ಹುರುಳಿಲ್ಲದ ಆರೋಪವಾಗಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಸ್ವಾಮಿ ಅವರು ಮಾಡಿರುವ ಆರೋಪದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕಾಗೋಡು ಈ ಸಂದರ್ಭದಲ್ಲಿ ಹೇಳಿದರು. |