ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಸರ್ಕಾರದ ನಡುವಿನ ಒಳಜಗಳ ಇದೀಗ ಮತ್ತೆ ಭುಗಿಲೆದ್ದಿದ್ದು, ರೇವಣ್ಣ ಮೇಲೆ ಸರ್ಕಾರ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಎಚ್.ಡಿ. ರೇವಣ್ಣ ಲೋಕೋಪಯೋಗಿ ಸಚಿವರಾಗಿದ್ದ ಅವಧಿಯಲ್ಲಿ ಬೆಂಗಳೂರು, ಸುತ್ತಲಿನ 46 ರಸ್ತೆಗಳ ನಿರ್ಮಾಣದಲ್ಲಿ ನಡೆದ ಕಳಪೆ ಕಾಮಗಾರಿ, ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಬೆಂಗಳೂರು ಸುತ್ತಲಿನ ರಸ್ತೆಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೇರಿಸಲು 1000 ಕೋಟಿ. ರೂ ವೆಚ್ಚದ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿದ್ದಾರೆ.
ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿ ಬಂದ ಬಳಿಕ ಅವ್ಯವಹಾರ ನಡೆದಿದ್ದರೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
|