ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.24ರಿಂದ 27ರ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಚುನಾವಣಾ ಪೂರ್ವ ಸಿದ್ಧತಾ ಸಭೆ ನಡೆಸಿದ ಬಳಿಕ ಅವರು ಮಾತನಾಡುತ್ತಿದ್ದರು.
ಈ ಸಭೆಯಲ್ಲಿ ಎಂಟೂ ಕ್ಷೇತ್ರಗಳ ಚುನಾವಣಾಧಿಕಾರಿಗಳು ಪಾಲ್ಗೊಂಡು ಚುನಾವಣಾ ಪ್ರಕ್ರಿಯೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಚುನಾವಣೆ ವೇಳೆ ಹಿಂಸಾತ್ಮಕ ಕೃತ್ಯಗಳನ್ನು ತಡೆಯುವ ಸಲುವಾಗಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳು ಮತ್ತು ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ನಡೆಯುವ ಸಂಘರ್ಷಗಳನ್ನು ತಡೆಯುವುದು. ಮುಕ್ತ ಮತ್ತು ಶಾಂತ ಮತದಾನ ಪ್ರಕ್ರಿಯೆಗೆ ಅವಕಾಶ ಮಾಡಿಕೊಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ವಿದ್ಯಾಶಂಕರ್ ತಿಳಿಸಿದರು.
ಮಧುಗಿರಿ ತುರುವೇಕೆರೆ ಸವಾಲು ಇದೇ ವೇಳೆ ಹೇಳಿಕೆ ನೀಡಿರುವ ತುಮಕೂರು ಜಿಲ್ಲಾಧಿಕಾರಿ, ಮಧುಗಿರಿ ಮತ್ತು ತುರುವೇಕೆರೆಗಳಲ್ಲಿ ಮದ್ಯ ಸರಬರಾಜು ತಡೆಯಲು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಚುನಾವಣೆ ನಡೆಸುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ ಎಂದು ತಿಳಿಸಿದ್ದಾರೆ. |