ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುತ್ತಿರುವ ಭಯೋತ್ಪಾದನೆ, ನಕ್ಸಲ್ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಜನವರಿ 6 ರಂದು ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ ಬಿಜೆಪಿ ಆಡಳಿತಾರೂಢ ಮುಖ್ಯಮಂತ್ರಿಗಳು ಈ ಬಗ್ಗೆ ಧ್ವನಿ ಎತ್ತುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ದೇಶಾದ್ಯಂತ ಭಯೋತ್ಪಾದನಾ ದಾಳಿಗಳು ರಾಷ್ಟ್ರದ ಕಾನೂನು ಸುವ್ಯವಸ್ಥೆಗೆ ಸವಾಲಾಗುವಂತಿದೆ. ಆ ನಿಟ್ಟಿನಲ್ಲಿ ಈ ಬಗ್ಗೆ ಬಿಜೆಪಿ ಆಡಳಿತಾರೂಢ ರಾಜ್ಯದ ಮುಖ್ಯಮಂತ್ರಿಗಳು ಗಂಭೀರವಾಗಿ ಧ್ವನಿ ಎತ್ತುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ಆ ನಿಟ್ಟಿನಲ್ಲಿ ಪಕ್ಷದ ವರಿಷ್ಠರಾಗಿರುವ ಎಲ್.ಕೆ.ಆಡ್ವಾಣಿ ಅವರ ಮನೆಯಲ್ಲಿ ಜನವರಿ 5ರಂದು ಬಿಜೆಪಿ ಮುಖ್ಯಮಂತ್ರಿಗಳು ಸಭೆ ನಡೆಸಿ, ವಿಷಯದ ಚರ್ಚೆಯ ಕುರಿತು ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಭಯೋತ್ಪಾದನೆಯನ್ನು ಸಮರ್ಥವಾಗಿ ಮಟ್ಟಹಾಕುವಲ್ಲಿ ಬಲವಾದ ರಕ್ಷಣಾ ವ್ಯವಸ್ಥೆಯನ್ನು ಮಾಡುವ ಕುರಿತು ನಾವು ಚರ್ಚೆ ನಡೆಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
|