ಉಪಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ಮಧುಗಿರಿ ಕ್ಷೇತ್ರವನ್ನು ಪ್ರವೇಶಿಸಿದ್ದಕ್ಕೆ ಚುನಾವಣಾ ಆಯೋಗ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಡಿ.27ರಂದು ನಡೆದ ಉಪಚುನಾವಣೆಯಂದು ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ರಾಜ್ಯಾದ್ಯಂತ ಕುತೂಹಲ ಕೆರಳಿಸಿದ್ದ ಮಧುಗಿರಿ ಪ್ರವೇಶಿಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಣ್ಣ ಮತ್ತು ಜಮೀರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಪೊಲೀಸರ ಮಧ್ಯಪ್ರವೇಶದಿಂದಾಗಿ ಪ್ರಕರಣವನ್ನು ಸುಖಾಂತ್ಯಗೊಳಿಸಲಾಗಿತ್ತು.
ಬಳಿಕ ಕುಮಾರಸ್ವಾಮಿ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.
ಮಧುಗಿರಿ ಪ್ರವೇಶಿಸಿಲ್ಲ: ಆಯೋಗದ ನೋಟಿಸ್ ಜಾರಿಯಾದ ನಂತರ, ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ನಾನು ಮಧುಗಿರಿ ಕ್ಷೇತ್ರವನ್ನು ಪ್ರವೇಶಿಸಿಲ್ಲ, ಕೊರಟಗೆರೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಅಷ್ಟೇ. ಅಲ್ಲದೇ ನಾನು ಚುನಾವಣಾ ನೀತಿ ಸಂಹಿತೆಯನ್ನೂ ಉಲ್ಲಂಘಿಸಿಲ್ಲ.
ಚುನಾವಣಾ ಆಯೋಗ ನೀಡಿರುವ ನೋಟಿಸ್‌ಗೆ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. |