ವಿಶೇಷ ಸಂದರ್ಭದ ಎದುರಾದರೆ ಮಾತ್ರ ಬಿಜೆಪಿ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡುವ ಪರಿಸ್ಥಿತಿ ಬರಲಾರದು. ಒಂದು ವೇಳೆ ಅಂತಹ ಸಂದರ್ಭ ಬಂದಲ್ಲಿ ರಾಷ್ಟ್ರೀಯ ನಾಯಕರುಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆಯೇ ಎಂಬ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಸ್ಥಿರವಾಗಿಸುವ ನಿಟ್ಟಿನಲ್ಲಿ ಹೊರಗಿನಿಂದ ಹಲವಾರು ಮಂದಿ ಬೆಂಬಲ ನೀಡಿದ್ದಾರೆ. ಹೀಗೆಂದ ಮಾತ್ರಕ್ಕೆ ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿ, ಅವರ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡಲಾರೆ. ಅವರು ಹಿರಿಯ ನಾಯಕರು, ಯಾವುದು ತಪ್ಪು ಸರಿ ಎಂಬುದು ತಿಳಿದಿದೆ. ಸರಿಯಾಗಿ ಯೋಚಿಸಿ ತೀರ್ಮಾನಕ್ಕೆ ಬರಲಿ ಎಂದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 20 ಸೀಟುಗಳಲ್ಲಿ ಗೆಲ್ಲಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
|