ರಾಜ್ಯದಲ್ಲಿ ಯುವ ಕಾಂಗ್ರೆಸ್‌ನ್ನು ಪುನಾರಚಿಸಿ ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ಜನವರಿ 15 ಮತ್ತು 16 ರಂದು 2 ದಿನಗಳ ಕಾಲ ರಾಜ್ಯಮಟ್ಟದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದೆ.
ರಾಜಕಾರಣಕ್ಕೆ ಯುವ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಿ, ಪ್ರತಿಭಾವಂತರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅಶೋಕ್ ತನ್ವೀರ್, ಎಐಸಿಸಿ ಕಾರ್ಯದರ್ಶಿ ಜಿತೇಂದ್ರಸಿಂಗ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಗಳಲ್ಲಿ ಶಿಫಾರಸ್ಸಿಗಿಂತ ಪ್ರತಿಭಾವಂತರಿಗೆ ಪ್ರಾಧಾನ್ಯತೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರಸಕ್ತ ರಾಜಕೀಯ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕಾದರೆ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರಕ್ಕೆ ಬರಬೇಕು. ಅದಕ್ಕಾಗಿ ರಾಜಕೀಯದಲ್ಲಿ ಆಸಕ್ತಿ ಇರುವ 35 ವರ್ಷದೊಳಗಿನ ಯಾರು ಬೇಕಾದರೂ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರತಿಭಾವಂತರಿಗೆ ರಾಜ್ಯ ಮತ್ತು ಜಿಲ್ಲಾ ಘಟಕಗಳ ಪುನಾರಚನೆ ಸಂದರ್ಭದಲ್ಲೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. |