ದಕ್ಷಿಣ ಕನ್ನಡದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಕಿಡಿ ಕಾರಿದ್ದಾರೆ.ಅವರು ಇತ್ತೀಚೆಗೆ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸಂಶೀರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ನಂತರ ಮುಸ್ಲಿಂರು, ಕ್ರೈಸ್ತ ಧರ್ಮಿಯರು ಭಯದಲ್ಲಿಯೇ ಬದುಕುವ ವಾತಾವರಣ ನಿರ್ಮಾಣವಾಗಿದೆ ಎಂದು ದೂರಿದರು.ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಶನಿವಾರ ಮಧ್ನಾಹ್ನ ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಸಂಶೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದ.ಕಾಟಿಪಳ್ಳದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ಸಂಶೀರ್ ಮತ್ತು ರೆಹಮತ್ ಎಂಬಿಬ್ಬರ ಮೇಲೆ ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ, ಸಂಶೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ರೆಹಮತ್ ಗಂಭೀರವಾಗಿ ಗಾಯಗೊಂಡಿದ್ದ. ಇದೀಗ ರೆಹಮತ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. |