ವಿಧಾನಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಜಾತ್ಯತೀತ ಜನತಾದಳದ ಶಾಸಕ ಪುಟ್ಟಣ್ಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಬಹುತೇಕ ಅವರ ಆಯ್ಕೆ ಖಚಿತಗೊಂಡಿದೆ.
ಈ ಮೊದಲಿನ ಕಾಂಗ್ರೆಸ್ ಮತ್ತು ಜೆಡಿಎಸ್ ಒಪ್ಪಂದದಂತೆ, ಜೆಡಿಎಸ್ ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದಕ್ಕೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ಕೂಡ ಹೇಳಿದೆ.
ಬುಧವಾರ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಸೋಮವಾರ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದರು.
ಈ ಸ್ಥಾನಕ್ಕೆ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆ ನಿರ್ಧಾರವನ್ನು ಕೈಗೊಳ್ಳುವಂತೆ ತಮ್ಮ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ವಹಿಸಿಕೊಡಲಾಗಿತ್ತು. ಅಂತಿಮವಾಗಿ ಶಾಸಕ ಪುಟ್ಟಣ್ಣ ಅವರನ್ನು ಉಪಸಭಾಪತಿ ಮಾಡಲು ಸಮಿತಿ ಶಿಫಾರಸು ಮಾಡಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ. |