ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಕಾಂಗ್ರೆಸ್‌ನಲ್ಲಿಯೇ ಮುಂದುವರಿಯುತ್ತಾರೆ. ಅವರು ಪಕ್ಷವನ್ನು ತೊರೆಯುತ್ತೇನೆ ಎಂದು ತಮ್ಮಲ್ಲಿ ಹೇಳಿಲ್ಲ.
ಅವರ ಕೆಲವು ಬೆಂಬಲಿಗರು ಅವರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ದುರ್ಬಲಗೊಂಡಿದೆ ಎನ್ನುವುದರಲ್ಲಿ ಅರ್ಥವಿಲ್ಲ. ಉಪಚುನಾವಣೆಗೂ ಮುಂದೆ ಬರುವ ಲೋಕಸಭಾ ಚುನಾವಣೆಗೂ ವ್ಯತ್ಯಾಸವಿದೆ. ಫೆ. 5ರ ನಂತರ ಪಕ್ಷವನ್ನು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಪಾರದರ್ಶಕ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಕಾರ್ಯಕರ್ತರ ಸಲಹೆ ಮತ್ತು ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಹಿರಿಯ ನಾಯಕರ 14 ತಂಡಗಳು ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಸಂಭವನೀಯ ಅಭ್ಯರ್ಥಿಗಳ ಕುರಿತು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ವರಿಷ್ಠರಿಗೆ ಸೂಕ್ತ ಹೆಸರನ್ನು ಶಿಫಾರಸು ಮಾಡಲಾಗುವುದು ಎಂದರು.
|