ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಗೃಹ ಸಚಿವ ಡಾ| ವಿ.ಎಸ್. ಆಚಾರ್ಯ ಅವರನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ನಿಯೋಗ ರಾಜಭವನದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ಗೃಹ ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿದೆ.
ಮಂಗಳೂರಿನಲ್ಲಿ ನಡೆದಿರುವ ಪಬ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಯುವತಿಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದರೆ, ಅವರನ್ನು ಸಂಪುಟದಿಂದ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯಪಾಲರ ಭೇಟಿ ಬಳಿಕ ಆರ್.ವಿ.ದೇಶಪಾಂಡೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಅಲ್ಲದೆ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥಿತ ಹದಗೆಟ್ಟಿದೆ. ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಗೋರಕ್ಷಣೆ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. ಚರ್ಚಗಳು ಮತ್ತು ಅಲ್ಪಸಂಖ್ಯಾತರಿಗೆ ರಕ್ಷಣೆ ಸಿಗುತ್ತಿಲ್ಲ. ಈ ಬಗ್ಗೆ ಗೃಹ ಸಚಿವರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. |