ಸೇತುಗಳ ಸಮೀಪದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಸೇತುವೆಗಳ ಜೊತೆಗೆ ಮಾನವನ ಜೀವಕ್ಕೂ ಅಪಾಯ ಆಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯದಲ್ಲಿನ ಯಾವುದೇ ಸೇತುಗಳ ಒಂದು ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಶುಕ್ರವಾರ ಆದೇಶ ಹೊರಡಿಸಿದೆ.
ಅಲ್ಲದೇ ಸೇತುವೆಯ ಒಂದು ಕಿ.ಮೀ.ವ್ಯಾಪ್ತಿಯಲ್ಲಿ ಮರಳು ತೆಗೆಯುವುದಕ್ಕೂ ಕೋರ್ಟ್ ನಿರ್ಬಂಧ ಹೇರಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ 700ಮೀಟರ್ ವ್ಯಾಪ್ತಿಯಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ.ಡಿ.ದಿನಕರನ್ ಹಾಗೂ ನ್ಯಾಯಮೂರ್ತಿ ವಿ.ಜಿ.ಸಭಾಹಿತ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಒಂದು ವೇಳೆ ಈ ರೀತಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡಲ್ಲಿ ಈ ಕ್ರಮ ಕೋರ್ಟ್ ಪ್ರಶಂಸೆಗೆ ಪಾತ್ರವಾಗಲಿದೆ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. |