ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲು ಬಿಜೆಪಿ ವರಿಷ್ಠರು ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿಯಲ್ಲಿ ಜರುಗಿದ ಚುನಾವಣಾ ನಿರ್ವಹಣಾ ಸಮಿತಿ ರಾಘವೇಂದ್ರ ಅವರನ್ನು ಕಣಕ್ಕಿಳಿಸುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ. ಆದರೆ ಯಡಿಯೂರಪ್ಪ ತಮ್ಮ ಪುತ್ರನನ್ನು ಚುನಾವಣೆಗೆ ಇಳಿಸುವುದರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಈ ವಿಚಾರದಲ್ಲಿ ತಾವು ಯಾವುದೇ ಒತ್ತಡ ತರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪುತ್ರ ರಾಘವೇಂದ್ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಇತ್ತೀಚೆಗಷ್ಟೇ ಯಡಿಯೂರಪ್ಪ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಕುಟುಂಬ ರಾಜಕಾರಣ ಮಾಡುವ ಇರಾದೆ ತನ್ನದಲ್ಲ, ನಾನು ಮಗನಿಗೆ ಸಮಜಾಯಿಷಿಕೆ ಹೇಳಿರುವುದಾಗಿಯೂ ಸ್ಪಷ್ಟಪಡಿಸಿದ್ದರು.
ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರತಿಯೊಂದು ಲೋಕಸಭಾ ಸ್ಥಾನವೂ ಮುಖ್ಯವಾಗಿದೆ. ಆದ್ದರಿಂದ ಗೆಲ್ಲುವ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು ಎನ್ನುವ ನಿರ್ಧಾರದ ಹಿನ್ನೆಲೆಯಲ್ಲಿ ರಾಘವೇಂದ್ರ ಅವರ ಬಗ್ಗೆ ವರಿಷ್ಠರು ಒಲವು ತೋರಿದ್ದಾರೆ ಎನ್ನಲಾಗಿದೆ. ಈ ನಡುವೆ ವರಿಷ್ಠರು 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಈ ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ಅವರು ಬಿಜೆಪಿ ಸೇರಿದ್ದಾರೆ. ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ. |