ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಸಲು ಶ್ರೀರಾಮಸೇನೆಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಬಿಜೆಪಿ ಗಂಭೀರವಾಗಿ ಆರೋಪ ಮಾಡಿದೆ.
ಶ್ರೀರಾಮ ಸೇನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಆದರೆ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನದಲ್ಲಿ ಸೇನೆ ತೊಡಗಿದೆ. ಅದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ಇದಕ್ಕೆ ಮಂಗಳೂರಿನಲ್ಲಿ ನಡೆದ ಪಬ್ ದಾಳಿ ಪ್ರಕರಣವೇ ಒಂದು ನಿದರ್ಶನ ಎಂದು ಕೇಂದ್ರದ ಮಾಜಿ ಸಚಿವ ಧನಂಜಯ ಕುಮಾರ್ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮ ಸೇನೆ ಮತ್ತು ಕಾಂಗ್ರೆಸ್ ಸಂಬಂಧದ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು. ಈ ದಾಳಿಯ ಬಗ್ಗೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಪಡೆದಿಲ್ಲ. ರಾಜ್ಯ ಸರ್ಕಾರದ ಗಮನಕ್ಕೆ ಬಾರದೆ ಮಹಿಳಾ ಆಯೋಗದ ಸದಸ್ಯರು ಘಟನೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ದೂರಿದರು.
ರಾಜ್ಯ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನಡೆಸುತ್ತಿರುವ ಭಯೋತ್ಪಾದನೆ ವಿರುದ್ಧ ವಿದ್ಯಾರ್ಥಿ ಜಾಗೃತಿ ಬಗ್ಗೆ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಮುಂದಿನ ದಿನಗಳಲ್ಲಿ ಪ್ರತಿಭಟನೆ ಹೆಸರಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಷಡ್ಯಂತ್ರ ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. |