ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದ್ದು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ 14 ತಂಡಗಳು ವಿವಿಧ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಜಯ ದೀಕ್ಷಾ ಅಭಿಯಾನಕ್ಕೆ ಬುಧವಾರ ಚಾಲನೆ ದೊರೆತಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವುದರ ಜತೆಗೆ ಬಹಿರಂಗ ಸಭೆಗಳನ್ನು ನಡೆಸಿ ಪಕ್ಷವನ್ನು ಸಂಘಟಿಸಲು ಹಿರಿಯ ನಾಯಕರ ನೇತೃತ್ವದಲ್ಲಿ 14 ತಂಡಗಳನ್ನು ರಚಿಸಲಾಗಿದೆ.
ಪ್ರಧಾನಿ ಡಾ| ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಯುಪಿಎ ಸರ್ಕಾರದ ಸಾಧನೆಗಳು, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರದ ದುರುಪಯೋಗ ಹಾಗೂ ಎನ್ಡಿಎ ದಿನೇ ದಿನೇ ದುರ್ಬಲಗೊಳ್ಳುತ್ತಿರುವ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಿರುತೆರೆ ಕಲಾವಿದರು ಕಾಂಗ್ರೆಸ್ ಸೇರ್ಪಡೆ: ಹಾಸ್ಯ ಕಲಾವಿದ ಮಿಮಿಕ್ರಿ ದಯಾನಂದ ಹಾಗೂ ಶಂಖಾನಂದ ಆಂಜನಪ್ಪ ಸೇರಿದಂತೆ ಒಟ್ಟು 58 ಮಂದಿ ಸಿನಿಮಾ ಹಾಗೂ ಕಿರುತೆರೆ ಕಲಾವಿದರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳು ಹಾಗೂ ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಅವರ ನಾಯಕತ್ವವನ್ನು ಒಪ್ಪಿ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು. |