ಕಳೆದ 60ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಶಿಕ್ಷಣ, ವಸತಿ ಶಾಲೆ ಅವರ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಗಮನ ನೀಡಲೇ ಇಲ್ಲ, ಇದಕ್ಕೆ ಕಾಂಗ್ರೆಸ್ ನಾಯಕರೇ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಲ್.ಬಸವರಾಜು ಅವರ ದಲಿತಪರ ಕಾಳಜಿಯನ್ನು ತಾವು ಗಂಭೀರವಾಗಿ ಪರಿಗಣಿಸಿದ್ದು, ಅವರ ಸ್ಥಿತಿಗತಿ ಸುಧಾರಣೆಗೆ ಪ್ರಾಮಾಣಿಕವಾಗಿ ವಿಶೇಷ ಗಮನ ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದರು.
ಅಧಿಕಾರಕ್ಕೆ ಬರುವ ಮುನ್ನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡಿದ್ದು ಬಿಟ್ಟರೆ, ಅಧಿಕಾರಕ್ಕೆ ಬಂದ ಮೇಲೆ ಅವರ ಸುಧಾರಣೆ ಬಗ್ಗೆ ಗಮನ ನೀಡಲೇ ಇಲ್ಲ, ಕಾಂಗ್ರೆಸ್ ಮುಖಂಡರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇಂದು ಭೋವಿ ದಲಿತರ ಕಾಲೋನಿಗಳಿಗೆ ಕಾಲಿಡಲೂ ಆಗದಂತಹ ಸ್ಥಿತಿ ಎದುರಾಗಿದೆ. ಇದೆಲ್ಲವೂ ಕಾಂಗ್ರೆಸ್ ಮುಖಂಡರ ಕೊಡುಗೆ ಎಂದು ಅವರು ಆರೋಪಿಸಿದರು. ಬಿಜೆಪಿ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ, ಹುಸಿ ಭರವಸೆ ನೀಡುವುದಿಲ್ಲ ಎಂದು ಹೇಳಿದರು.
ಕಳೆದ ಮೂರು ಬಜೆಟ್‌ಗಳಲ್ಲಿ ಈ ಜನರಿಗಾಗಿ ನಾವೇನು ಮಾಡಿದ್ದೇವೆ, ಕಾಂಗ್ರೆಸ್ ಸರ್ಕಾರ ಏನು ಮಾಡಿತು ಎಂಬುದರ ಅಂಕಿ ಅಂಶಗಳನ್ನು ಜನರ ಮುಂದಿಡಲಿದ್ದೇವೆ ಎಂದರು. |