ಶುಕ್ರವಾರ ಮಂಗಳೂರು ಸಮೀಪ ಕೇರಳದ ಸಿಪಿಎಂ ಶಾಸಕರ ಪುತ್ರಿಯ ಅಪಹರಣ ಪ್ರಕರಣವು "ತಮ್ಮ ಸರಕಾರದ ಪ್ರತಿಷ್ಠೆಗೆ ಹಾನಿ ಮಾಡುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳ ಸಂಘಟಿಕ ಒಳಸಂಚು" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್, ನನ್ನ ಸರಕಾರದ ಜನಪ್ರಿಯತೆಯನ್ನು ಸಹಿಸಲಾರದೆ, ಹೇಗಾದರೂ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಒಳ ಸಂಚು ರೂಪಿಸಿವೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ನಾಗ್ಪುರಕ್ಕೆ ತೆರಳಿರುವ ಯಡಿಯೂರಪ್ಪ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಭಯ ಮತ್ತು ಗೊಂದಲದ ವಾತಾವರಣ ಸೃಷ್ಟಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಯಡಿಯೂರಪ್ಪ ದೂರಿದರು. ಇದೊಂದು ಚಿಕ್ಕ ಘಟನೆ. ಆದರೆ ಇದಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ, ತಾಲಿಬಾನೀಕರಣ ಆಗುತ್ತಿದೆ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವೆ ರೇಣುಕಾ ಚೌಧುರಿಯವರನ್ನು ಯಡಿಯೂರಪ್ಪ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಶಾಸಕರ ಪುತ್ರಿ ಶ್ರುತಿಯ ಅಪಹರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದೇನೆ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದರಲ್ಲದೆ, ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಸಿದರು. |