ಜಾಗತಿಕ ಆರ್ಥಿಕ ಹಿಂಜರಿತದಿಂದ ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಏರ್ ಇಂಡಿಯಾ -2009ರ ಪ್ರದರ್ಶನ ಹಿನ್ನೆಲೆಯಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ಸೇನೆಯ ಎಲ್ಲ ವಿಭಾಗಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಅಭಿವೃದ್ದಿ ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಈ ಕುರಿತು ಆಯಾ ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಮುಂಬಯಿ ದಾಳಿ ಪ್ರಕರಣದ ಬಳಿಕ ಸೇನೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ. ರಕ್ಷಣಾ ಸಂಬಂಧಿತ ಸಂಶೋಧನೆಗಳಿಗೆ ಇಲಾಖೆ ಬಜೆಟ್‌ನಲ್ಲಿ ಕೇವಲ ಶೇ.6ರಷ್ಟು ಹಣ ಬಳಸಲಾಗುತ್ತಿದೆ. ಇನ್ನು ಮುಂದೆ ಇದಕ್ಕೆ ಅಧಿಕ ಪ್ರೋತ್ಸಾಹ ಕೊಡಲಾಗುವುದು ಎಂದರು. |