ಕರಾವಳಿ ಜಿಲ್ಲೆಗಳಲ್ಲಿ ಮಹಿಳೆಯರು, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶ್ರೀರಾಮ ಸೇನೆಯ ಕಿಡಿಗೇಡಿತನಕ್ಕೆ ಕುಮ್ಮಕ್ಕು ನೀಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರದೇಶ ಕಾಂಗ್ರೆಸ್ ಕಚೇರಿಯಿಂದ ಇಂಡಿಯನ್ ಎಕ್ಸ್ಪ್ರೆಸ್ ಮುಖಾಂತರ ರಾಜಭವನದವರೆಗೆ ಮೆರೆವಣಿಗೆ ನಡೆಸಿದ ಪಕ್ಷದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರೋಧಿ ನಿಲುವನ್ನು ಖಂಡಿಸಿದರು.
ವಿವೇಕಾನಂದ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಹೆಸರನ್ನು ದುರ್ಬಳಕೆ ಮಾಡಿ ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಲು ಭಯೋತ್ಪಾದನಾ ಜಾಗೃತಿ ಅಭಿಯಾನವನ್ನು ಸರ್ಕಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳಿಸಿ ರಾಜ್ಯವನ್ನು ಗುಜರಾತ್ ಮಾಡಲು ಬಿಜೆಪಿ ಸರ್ಕಾರ ಹೊರಟಿದ್ದು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. |