ಕೇಂದ್ರ ಸರ್ಕಾರ ನಿಗದಿ ಮಾಡಿರುವ ಶಾಸನಬದ್ದ ಕನಿಷ್ಠ ಬೆಲೆ ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಹೆಚ್ಚುವರಿ 160ರೂಪಾಯಿ ನೀಡುವಂತೆ ಸಕ್ಕರೆ ನಿರ್ದೇಶನಾಲಯ ಹೊರಡಿಸಿರುವ ಆದೇಶವನ್ನು ಹೈಕೋರ್ಟ್ ಶುಕ್ರವಾರ ರದ್ದು ಮಾಡಿದೆ.
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಮೂರ್ತಿ ಎನ್.ಕುಮಾರ್ ಮಹತ್ವದ ತೀರ್ಪು ನೀಡಿದ್ದಾರೆ.
2008ರ ಮಾರ್ಚ್ 28ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಧಾರವಾಡದ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಸಂಘಟನೆ ನಗರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸೇರಿದಂತೆ ಹಲವಾರು ಕಾರ್ಖಾನೆಗಳು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳು ಈ ಆದೇಶ ಹೊರಡಿಸಿದ್ದಾರೆ.
ಕಬ್ಬು ನಿಯಂತ್ರಣ ಆದೇಶ 1966ರ ಪ್ರಕಾರ ಕೇಂದ್ರ ಸರ್ಕಾರ ಕನಿಷ್ಠ ಬೆಲೆ ನಿಗದಿ ಮಾಡಿ, ಆದೇಶ ಹೊರಡಿಸಿದ ನಂತರ ಅದನ್ನು ಬದಲಾಯಿಸುವ ಅಧಿಕಾರ ರಾಜ್ಯಕ್ಕೆ ಇಲ್ಲ. ಅದೇನಾದರು ಬದಲಿಸಬೇಕು ಎಂದರೆ ಕೇಂದ್ರ ಸರ್ಕಾರ ಅನುಮತಿಯನ್ನು ರಾಜ್ಯ ಸರ್ಕಾರಕ್ಕೆ ನೀಡಿ, ಅಧಿಸೂಚನೆ ಹೊರಡಿಸಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. |