ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ನಿರಂತರವಾಗಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ದೂರಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ವಿ.ಎಸ್.ಉಗ್ರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ ಎಂದು ಟೀಕಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕಾಲದಲ್ಲಿ ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರ ಒದಗಿಸಲಾಗದ ಸರ್ಕಾರ ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿ ರೈತರ ಸಾವಿಗೂ ಕಾರಣವಾಗಿತ್ತು.
ಅಲ್ಲದೇ ಭಾನುವಾರ ಕೂಡ ರಾಯಚೂರಿನಲ್ಲಿ ಮತ್ತೊಮ್ಮೆ ರೈತರ ಮೇಲೆ ಗುಂಡು ಹಾರಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು. ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಈ ಸರ್ಕಾರದ ವಿರುದ್ಧ ಜನ ಭ್ರಮನಿರಸನಗೊಂಡಿದ್ದಾರೆ. ಈ ಸಂಬಂಧ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಅವರು ತಿಳಿಸಿದ್ದಾರೆ.
ರೈತರ ಮೇಲೆ ಇದೇ ರೀತಿ ಪದೇಪದೇ ಸರ್ಕಾರ ದಾಳಿ ಮಾಡುತ್ತಿದ್ದರೆ, ಕಾಂಗ್ರೆಸ್ ಪಕ್ಷ ಅದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. |