ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಇಲಾಖೆ ಇದೇ ಮೊದಲ ಬಾರಿಗೆ ಸಹಾಯವಾಣಿ ಆರಂಭಿಸಿದ್ದು, ಇದು ಮಾರ್ಚ್ 12 ರವರೆಗೆ ಪ್ರತಿ ದಿನ ಮಧ್ಯಾಹ್ನ 3 ರಿಂದ 4.30ರವರೆಗೆ 080-23366778/9ಗೆ ವಿದ್ಯಾರ್ಥಿಗಳು ದೂರವಾಣಿ ಕರೆ ಮಾಡಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳಿಸಬೇಕೆಂಬ ಉದ್ದೇಶದಿಂದ ಪೋಷಕರು, ಸ್ನೇಹಿತರು, ಉಪನ್ಯಾಸಕರು, ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಸಿಲುಕುವ ಅವರು ಅಧ್ಯಯನದಲ್ಲಿ ಆಸಕ್ತಿ ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಿದ್ಯಾರ್ಥಿಗಳಲ್ಲಿ ಭರವಸೆ, ಆತ್ಮಸ್ಥೈರ್ಯ ಮೂಡಿಸಲು ಸಹಾಯವಾಣಿ ಹಾಗೂ ಕೌನ್ಸೆಲಿಂಗ್ ನಡೆಸಲಾಗುವುದು. ಮನಃಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ವೈದ್ಯರು ದೂರವಾಣಿ ಮೂಲಕ ಸಮಾಲೋಚನೆ ನಡೆಸಲಿದ್ದಾರೆ. ವಿದ್ಯಾರ್ಥಿಗಳು ಕರೆ ಮಾಡಿ ತಮ್ಮ ಸಮಸ್ಯೆ, ಸಂದೇಹಗಳಿಗೆ ಪರಿಹಾರ ಕಂಡುಕೊಳ್ಳಬಹುದೆಂದರು.
ವಿದ್ಯಾರ್ಥಿಗಳ ಪ್ರತಿಕ್ರಿಯೆಯನ್ನು ಆಧರಿಸಿ ಸಹಾಯವಾಣಿಯ ಅವಧಿಯನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಮುಂಬರುವ ದಿನಗಳಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು. |