ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 2ನೇ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಮೊದಲು ಫೆಬ್ರುವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲು ಚಿಂತನೆ ನಡೆಸಲಾಗಿತ್ತು. ಆದರೆ ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿಯಾಗಿದ್ದ ಪೃಥ್ವಿರಾಜ್ ಚೌಹಾಣ್ ಅವರ ಬದಲಿಗೆ ಗುಲಾಂ ನಬಿ ಆಜಾದ್ ಅವರನ್ನು ಪಕ್ಷದ ಹೈಕಮಾಂಡ್ ನಿಯೋಜಿಸಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಲಿದೆ.
ಗುಲಾಂ ನಬಿ ಆಜಾದ್ ಅವರು ಸದ್ಯದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರೊಂದಿಗೆ ಚರ್ಚಿಸಲಾಗುವುದು. ದೆಹಲಿಯಲ್ಲೂ ವರಿಷ್ಠರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗುವುದು. ಆ ಬಳಿಕವಷ್ಟೇ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ದೇಶಪಾಂಡೆ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಸ್ಥಾನ ಬದಲಾವಣೆ ಬಗ್ಗೆ ಈವರೆಗೆ ನಿರ್ಧಾರವಾಗಿಲ್ಲ. ಅವರು ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಈಗಲೂ ಇದ್ದಾರೆ. ಊಹಾಪೋಹಾ ವರದಿಗಳನ್ನು ಕೇಳಿ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದರು. ಬಳ್ಳಾರಿಯಲ್ಲಿ ವಿಮಾನ ನಿಲ್ದಾಣಕ್ಕಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿರುವುದು ಸರಿಯಲ್ಲ ಇದನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |