ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಶಿಕ್ಷೆ ಅನುಭವಿಸಿದ ವ್ಯಕ್ತಿಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್.ವಿದ್ಯಾಶಂಕರ್ ಮತ್ತು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಈ ವಿಷಯ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ರಾಜ್ಯದ ನಾನಾ ಭಾಗಗಳಲ್ಲಿ ನಾಲ್ಕು ಸಾವಿರ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವುಗಳಲ್ಲಿ ಕೆಲ ಪ್ರಕರಣ ರಾಜ್ಯದ ಕೆಲವು ಕೋರ್ಟ್‌ಗಳಲ್ಲಿ ವಿಚಾರಣೆ ಹಂತದಲ್ಲಿವೆ. ವಿವರ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದ ಸುತ್ತಮುತ್ತಲ ಐದು ಕ್ಷೇತ್ರಗಳೂ ಸೇರಿದಂತೆ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಆಯೋಗ ಹಾಗೂ ಪೊಲೀಸರು ಸಕಲ ಸಿದ್ಧತೆ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ನಾಲ್ಕು ಕ್ಷೇತ್ರಗಳು ಒಳಪಟ್ಟಿರುತ್ತವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಡಿವೈಎಸ್ಪಿ ಮಟ್ಟದ ಓರ್ವ ಪೊಲೀಸ್ ಅಧಿಕಾರಿ ಉಸ್ತುವಾರಿ ವಹಿಸುತ್ತಾರೆ.
ರಾಜಕಾರಣಿಗಳಾಗಲಿ, ಸಾರ್ವಜನಿಕರಾಗಲಿ ಚುನಾವಣಾ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿದ್ಯಾಶಂಕರ್ ಸೂಚಿಸಿದ್ದಾರೆ. |