ಲೋಕಸಭಾ ಚುನಾವಣೆಗೆ ದಿನ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಸರತ್ತು ಪ್ರಾರಂಭಿಸಿದ್ದರೆ, ಜೆಡಿಎಸ್ ನಿರಾತಂಕವಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಬಹುತೇಕ ಅಂತಿಮಗೊಳಿಸಿದೆ.ರಾಜ್ಯದ 28 ಕ್ಷೇತ್ರಗಳಲ್ಲಿ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ನಿರ್ಧರಿಸಿದೆ. ಈಗಾಗಲೇ 15 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇದೇ ವೇಳೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಡಲು ಜೆಡಿಎಸ್ ತೀರ್ಮಾನಿಸಿದೆ.ಹಾಸನ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕಣಕ್ಕಿಳಿಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಎಚ್.ಡಿ. ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸಲು ಚಿಂತನೆ ನಡೆಸಿದೆ. ಉಳಿದಂತೆ ಬೆಂಗಳೂರು ಸೆಂಟ್ರಲ್‌ನಿಂದ ಜಮೀರ್ ಅಹಮದ್ ಖಾನ್, ಮಂಡ್ಯದಿಂದ ಚೆಲುವರಾಯಸ್ವಾಮಿ, ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಪ್ರೊ. ಕೆ.ಇ. ರಾಧಾಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.ಕ್ಷೇತ್ರ ಪುನರ್ವಿಂಗಡನೆ ಬಳಿಕ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಬೇರ್ಪಟ್ಟು ಮೈಸೂರು ಕ್ಷೇತ್ರಕ್ಕೆ ಕೊಡಗಿನ ಎರಡು ಕ್ಷೇತ್ರಗಳು ಸೇರ್ಪಡೆ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜೀವಿಜಯ ಅವರನ್ನು ಮೈಸೂರು ಕ್ಷೇತ್ರಕ್ಕೆ ನಿಲ್ಲಿಸಲು ಜೆಡಿಎಸ್ ಆಲೋಚಿಸಿದೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. |