ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್, ಬಂಟಿಂಗ್, ಕಟೌಟ್ ಹಾಕಿದ್ದಲ್ಲಿ ಆಂತಹವರ ವಿರುದ್ಧ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಬಿಬಿಎಂಪಿ ಚುನಾವಣಾಧಿಕಾರಿ ಶ್ರೀಕರ್ ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ತಲಾ 8ವಿಧಾನಸಭಾ ಕ್ಷೇತ್ರಗಳು ಸೇರಿದ್ದು ತಲಾ 17ರಂತೆ ರಚಿಸಲಾಗಿರುವ ಒಟ್ಟು 34ಕಾರ್ಯಪಡೆಗಳು ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶ್ರೀಕರ್ ವಿವರಿಸಿದರು.
ಬುಧವಾರ ರಾಜ್ಯದ ವಿವಿಧ ಪಕ್ಷಗಳ ಮುಖಂಡರೊಂದಿಗೆ ನೀತಿ ಸಂಹಿತೆ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಅನಧಿಕೃತ ಬಂಟಿಂಗ್ಸ್, ಕಟೌಟ್, ಬ್ಯಾನರ್, ಪ್ರಚಾರ ಸಾಮಗ್ರಿಗಳನ್ನು ಪ್ರಕಟಿಸದಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕ ಸ್ಥಳ ಹಾಗೂ ಸರ್ಕಾರಿ ಕಟ್ಟಡಗಳಲ್ಲಿ ಚುನಾವಣಾ ಜಾಹೀರಾತು ಪ್ರದರ್ಶನಕ್ಕೆ ಅನುಮತಿ ನೀಡಲಾಗುವುದಿಲ್ಲ, ಮೈದಾನಗಳಲ್ಲಿ ಚುನಾವಣಾ ಸಭೆ ಸಮಾರಂಭಗಳನ್ನು ನಡೆಸಲು ಪಾಲಿಕೆಯ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದರು. |