ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಬೆಂಗಳೂರು ನಗರದ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರತೊಡಗಿದ್ದಾರೆ.
ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂನಬಿ ಆಜಾದ್ ಹಾಗೂ ಪಕ್ಷದ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿಯಾದ ನಿಯೋಗವು ರಾಜ್ಯಸಭಾ ಸದಸ್ಯರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ ಎಂಬ ಪಕ್ಷದ ಸೂತ್ರವನ್ನು ಕೃಷ್ಣ ಅವರಿಗೆ ಅನ್ವಯ ಮಾಡದೆ ಟಿಕೆಟ್ ಕೊಡಬೇಕೆಂದು ಕೋರಿದೆ.
ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದರು. ಐಟಿ-ಬಿಟಿ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡಿ ಇಡೀ ವಿಶ್ವದ ಗಮನವನ್ನು ಬೆಂಗಳೂರು ಸೆಳೆಯುವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಜವಾಗಿ ಮತದಾರರು ಅವರ ಬೆಂಬಲಕ್ಕೆ ನಿಂತಿದ್ದಾರೆ. ಆದ್ದರಿಂದ ಅವರಿಗೆ ಟಿಕೆಟ್ ನೀಡಬೇಕೆಂದು ನಿಯೋಗ ಒತ್ತಾಯಿಸಿದೆ. |