ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಪಾರಿವಾಳಗಳನ್ನು ಬಳಕೆ ಮಾಡುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದೆ.
ಚುನಾವಣಾ ಪ್ರಚಾರದ ವೇಳೆ ಯಾವುದೇ ಪ್ರಾಣಿ, ಪಕ್ಷಿಗಳನ್ನು ಬಳಕೆ ಮಾಡಬಾರದೆಂಬ ಕಾನೂನನ್ನು ಬಿಜೆಪಿ ಉಲ್ಲಂಘನೆ ಮಾಡುತ್ತಿರುವುದರಿಂದ ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲು ತೀರ್ಮಾನಿಸಿದೆ.
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಆಯೋಗ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದ್ದರೂ ಸಹ, ಬಿಜೆಪಿ ರಂಗೋಲಿ ಕೆಳಗೆ ನುಸುಳುವ ಪ್ರಯತ್ನ ಮಾಡುತ್ತಿರುವುದು ಆಯೋಗವನ್ನು ಕೆರಳಿಸಿದೆ. ಆದ್ದರಿಂದಲೇ ಆಯೋಗ ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿದೆ.
ಪಕ್ಷಿಗಳನ್ನು ಬಳಕೆ ಮಾಡುವುದು ಸಾಬೀತಾದರೆ ಕೂಡಲೇ ಅಂತಹವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಮೊಕದ್ದಮೆ ದಾಖಲು ಮಾಡಲು ಮತ್ತು ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸುವ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಆಯೋಗದ ಮೂಲಗಳು ಸ್ಪಷ್ಟಪಡಿಸಿವೆ. |