ರಾಜ್ಯ ಸರ್ಕಾರದ ವಿರುದ್ಧ ಕ್ಷುಲ್ಲಕ ಹೇಳಿಕೆ ನೀಡಿ ಜಾತಿ, ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಪ್ರಯತ್ನಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದೆಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಸೋನಿಯಾಗಾಂಧಿ ಅವರ ಪ್ರೇರಣೆಯಿಂದಾಗಿ ಕಳೆದ 5ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದೆ ಎಂದು ದೂರಿದರು.
ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ನಗರ ಮಂಗಳವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಜಾತಿ, ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದೆ ಎಂದು ಹೇಳಿಕೆ ನೀಡಿರುವ ಸೋನಿಯಾ ಗಾಂಧಿ ಅವರ ಹೇಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ಸರ್ಕಾರವೊಂದರ ಮೇಲೆ ಈ ರೀತಿ ಕ್ಷುಲ್ಲಕ ಹೇಳಿಕೆ ನೀಡಿರುವ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದರು.
ಸಮಾವೇಶದಲ್ಲಿ ಮಾತನಾಡಿದ ಶಾಸಕ ಸಿ.ಟಿ.ರವಿ ಅವರು, ಬಿಜೆಪಿ ಮುಸ್ಲಿಮರ ವಿರೋಧಿ ಅಲ್ಲ, ಮುಸ್ಲಿಮರನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಕಾಂಗ್ರೆಸ್ ಪಣ ತೊಟ್ಟು ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಮುಸ್ಲಿಮರ ವಿರುದ್ಧ ಎಂದು ಎತ್ತಿಕಟ್ಟಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು. |