ಲೋಕಸಭಾ ಚುನಾವಣೆಯ ಖರ್ಚಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರ ನೈಸ್ ಕಂಪೆನಿಗೆ 600 ಕೋಟಿ ರೂ.ಗಳ ಭೂಮಿಯನ್ನು ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರು ಕೂಡ ರಾಜ್ಯ ಸರ್ಕಾರ ಬಿಡದಿ ಬಳಿ 2 ಟೌನ್ ಶಿಪ್ ನಿರ್ಮಾಣಕ್ಕಾಗಿ ಅಧಿಸೂಚನೆ ಹೊರಡಿಸಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.
ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಇಂತಹ ಭ್ರಷ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿಯೇ ಕಂಡಿಲ್ಲ ಎಂದ ಅವರು ಚುನಾವಣೆಯ ಖರ್ಚಿಗಾಗಿ ನೈಸ್‌ಗೆ ಭೂಮಿ ಮಾರಾಟ ಮಾಡಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಮತದಾರರನ್ನು ದಿಕ್ಕು ತಪ್ಪಿಸುತ್ತಿರುವ ಭಾರತೀಯ ಜನತಾ ಪಕ್ಷ ಆಡಳಿತಯಂತ್ರವನ್ನು ದುರುಪಯೋಗಪಡಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಪರಿಶೀಲನೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. |